ಗೋಹತ್ಯೆ ವಿಚಾರವಾಗಿ ಪಶುಸಂಗೋಪನಾ ಸಚಿವ ವೆಂಕಟೇಶ್ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಹೇಳಿಕೆಯನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಸರಣಿ ಟ್ವಿಟ್ ಮಾಡಿರುವ ಅವರು, ”ಗೋವುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿರುವ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರ ಹೇಳಿಕೆ ಆಶ್ಚರ್ಯ ತಂದಿದ್ದು, ಅವರ ಹೇಳಿಕೆ ಖಂಡನೀಯ ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧ ಹೊಂದಿದ್ದು, ತಾಯಿ ಸ್ಥಾನದಲ್ಲಿ ಗೋವನ್ನು ಪೂಜಿಸುತ್ತೇವೆ” ಎಂದು ಹೇಳಿದ್ದಾರೆ.
”ಸಚಿವ ಕೆ. ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ, ತಮಗೆ ನೀಡಿರುವ ಖಾತೆಯನ್ನು ಬದಲಾಯಿಸಲಿ ಎಂದೊ, ಹೈ ಕಮಾಂಡ್ ಮೆಚ್ಚಿಸಲೊ?” ಎಂದು ಪ್ರಶ್ನೆ ಮಾಡಿದ್ದಾರೆ.
”ಗೋಹತ್ಯೆ ನಿಷೇಧ ಪ್ರಥಮವಾಗಿ ಪ್ರತಿಪಾದಿಸಿದ್ದು ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿಯವರು. ಪೂಜ್ಯ ಮಹಾತ್ಮಾ ಗಾಂಧಿ ಪ್ರತಿಪಾದಿಸಿದ ಗೋಹತ್ಯೆ ನಿಷೇಧವನ್ನು 1960ರ ದಶಕದಲ್ಲಿ ಹಲವಾರು ರಾಜ್ಯಗಳಲ್ಲಿ ಕಾನೂನು ತರಲಾಗಿದೆ” ಎಂದಿದ್ದಾರೆ.
”ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳ ಸಾಗಾಣಿಕೆ, ಸಾಮೂಹಿಕ ಗೋ ಹತ್ಯೆ ಮಾಡುವ ಕಾರ್ಖಾನೆಗಳು ತಲೆ ಎತ್ತಲಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನು ಬಾಹಿರ ಕಸಾಯಿ ಖಾನೆಗಳನ್ನು ತಡೆಗಟ್ಟಲು ಕಾನೂನು ತರಲಾಗಿದೆ. ಕರ್ನಾಟಕದಲ್ಲಿ ಹೊಸ ಕಾಯಿದೆ ತಂದಿಲ್ಲ. ಇರುವ ಕಾನೂನಿಗೆ ಬಲ ತುಂಬಿದ್ದೇವೆ” ಎಂದು ಹೇಳಿದ್ದಾರೆ.
”ಈ ರೀತಿಯ ಹೇಳಿಕೆ ನೀಡುವ ಮೊದಲು ಸಚಿವರು ಆಲೋಚನೆ ಮಾಡಬೇಕು. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರ ಸಚಿವರಿಗೆ ಸೂಕ್ತ ಸಲಹೆ ನೀಡುವುದು ಅವಶ್ಯಕತೆ ಇದೆ” ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆ (Cow Slaughter Prohibition Act) ರದ್ದುಗೊಳಿಸುವ ವಿಚಾರ ಸಂಬಂಧ ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಶುಸಂಗೋಪನಾ ಸಚಿವ ವೆಂಕಟೇಶ್ ಅವರು, ”ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು? ಎಂದು ಪ್ರಶ್ನಿಸಿದ್ದಾರೆ.
”ಈಗ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕೋಣ ಮತ್ತು ಎಮ್ಮೆಗಳ ವಧೆಗೆ ಅವಕಾಶವಿದೆ. ಆದರೆ, ಹಸುವನ್ನು ಕಡಿಯಲು ಅವಕಾಶ ಇಲ್ಲ. ಹಸುವನ್ನು ಯಾಕೆ ಕಡಿಯಬಾರದು? ಈ ಕಾಯ್ದೆಯಿಂದಾಗಿ ರೈತರಿಗೆ ಬಹಳ ತೊಂದರೆ ಆಗುತ್ತಿದೆ. ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದರು.
ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಸಚಿವರು ಭರವಸೆ ನೀಡಿದ್ದಾರೆ.